ಫುಲ್ ಅಲರ್ಟ್ ಆದ ಯಡಿಯೂರಪ್ಪ, ಈ ತಿಂಗಳಾಂತ್ಯಕ್ಕೆ ರಾಜ್ಯ ಬಿಜೆಪಿ ಸಭೆ

7,447

ಬೆಳಗಾವಿ,ಡಿ.13-ಪಂಚಾರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿರುವ ಕಾರಣ ಈ ತಿಂಗಳ ಅಂತ್ಯಕ್ಕೆ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಸಲು ತೀರ್ಮಾನಿಸಿದೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕೆಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

ಬೆಳಗಾವಿ ಅಧಿವೇಶನ ಮುಗಿದ ನಂತರ ಬೆಂಗಳೂರಿನಲ್ಲಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಮುಂದಿನ ಲೋಕಸಭಾ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳು ಹಾಗೂ ಪಕ್ಷ ಸಂಘಟನೆ ಕುರಿತು ಪದಾಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ. 28 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷ ಯಾವ ರೀತಿ ಕಾರ್ಯತಂತ್ರ ರೂಪಿಸಬೇಕು, ಆಡಳಿತಾರೂಢ ಸರ್ಕಾರದ ವಿರುದ್ದ ಜನಾಭಿಪ್ರಾಯ ಮೂಡಿಸುವುದು, ಅಭ್ಯರ್ಥಿಗಳ ಆಯ್ಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಚರ್ಚಿಸಬೇಕಾದ ವಿಷಯಗಳ ಬಗ್ಗೆ ದೆಹಲಿಯಲ್ಲಿ ಇಂದು ನಡೆಯುತ್ತಿರುವ ತುರ್ತು ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ನಿರ್ದೇಶನ ನೀಡುವರು. ರಾಜ್ಯದಿಂದ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಭಾಗವಹಿಸಲಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಕಾರಣ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿರುವ ಯಡಿಯೂರಪ್ಪ ಅನಿವಾರ್ಯ ಕಾರಣಗಳಿಂದ ಭಾಗವಹಿಸುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರವಿದ್ದು, ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸೂಚಿಸಿದ್ದಾರೆ.

ಹಾಲಿ ಇರುವ 16 ಸಂಸದರಲ್ಲಿ ಕೆಲವರಿಗೆ ಸೋಲು ಉಂಟಾಗುವ ಸಂಭವವಿದ್ದು, ಮೈತ್ರಿಯಾದರೆ ಬಿಜೆಪಿಗೆ ತೀವ್ರ ಹಿನ್ನಡೆಯಾಗುವ ಸಂಭವವಿದೆ. ಇದನ್ನು ತಡೆಗಟ್ಟಲು ಹೊಸ ರಣ ತಂತ್ರವನ್ನು ಬಿಜೆಪಿ ರೂಪಿಸಲು ಮುಂದಾಗಿದೆ.
ಕೇಂದ್ರ ವರಿಷ್ಠರ ಸೂಚನೆ ಹಿನ್ನೆಲೆಯಲ್ಲಿ ಬಿಎಸ್‍ವೈ ಪದಾಧಿಕಾರಿಗಳ ಸಭೆ ಕರೆದಿದ್ದಾರೆ. ಈಗಾಗಲೇ ಎಲ್ಲರಿಗೂ ಮೌಖಿಕವಾಗಿ ಸೂಚನೆ ಕೊಡಲಾಗಿದೆ. ಅಧಿವೇಶನ ಮುಗಿದ ನಂತರ ತಮ್ಮ ತಮ್ಮ ಕ್ಷೇತ್ರದಲ್ಲಿ ನಿಗದಿತ ಕಾರ್ಯಕ್ರಮಗಳು ಇರುವ ಹಿನ್ನೆಲೆಯಲ್ಲಿ ತಿಂಗಳ ಅಂತ್ಯಕ್ಕೆ ಸಭೆಯ ದಿನಾಂಕ ನಿಗದಿಯಾಗಲಿದೆ.

ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವುದು ಹಾಗೂ ದೋಸ್ತಿ ಸರ್ಕಾರದ ವೈಫಲ್ಯಗಳನ್ನು ಜನರ ಬಳಿ ಕೊಂಡೊಯ್ದು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಎಲ್ಲರಿಗೂ ಬಿಎಸ್‍ವೈ ನಿರ್ದೇಶನ ನೀಡುವರು.
2019ರ ಲೋಕಸಭಾ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಎಲ್ಲ ಪ್ರಾದೇಶಿಕ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಮಹಾಘಟಬಂಧನ್ ರಚಿಸುತ್ತಿದೆ. ಹೀಗಾಗಿ ಇದನ್ನು ಸಮರ್ಥವಾಗಿ ಎದುರಿಸಲು ಈಗಿನಿಂದಲೇ ಚುನಾವಣೆಗೆ ಸಿದ್ದತೆಗಳನ್ನು ಕೈಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಲು ಸಭೆ ಕರೆಯಲಾಗಿದೆ.

Leave A Reply

Your email address will not be published.