ನಾಳೆ ಮಹತ್ವದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

4,976

ಬೆಂಗಳೂರು, ಜ.7-ಕಾಂಗ್ರೆಸ್ ಪಕ್ಷದ ಶಾಸಕರನ್ನು ನಿಗಮ ಮಂಡಳಿ ಹಾಗೂ ರಾಜಕೀಯ ಕಾರ್ಯದರ್ಶಿ ಸ್ಥಾನಗಳಿಗೆ ನೇಮಕ ಮಾಡಿದ ಬೆನ್ನಲ್ಲೇ ಜೆಡಿಎಸ್ ನಾಳೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಸಲಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಿದ್ದಾರೆ. ಬಾಕಿ ಉಳಿದಿರುವ ಎರಡು ಸಚಿವ ಸ್ಥಾನ ಭರ್ತಿ ಮಾಡುವುದು, ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮಕರ ಸಂಕ್ರಾಂತಿ ಹಬ್ಬದ ನಂತರ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗೆ ನೇಮಕ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಈಗಾಗಲೇ ನೀಡಲಾಗಿತ್ತು. ಆದರೂ ಶಾಸಕರು, ಕಾರ್ಯಕರ್ತರಿಂದ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಶಾಸಕಾಂಗ ಪಕ್ಷದ ಸಭೆಯನ್ನು ನಡೆಸಲಾಗುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಈಗಾಗಲೇ ಕಾಂಗ್ರೆಸ್ ಪಕ್ಷದ ಶಾಸಕರನ್ನು ನಿಗಮ -ಮಂಡಳಿ ಮತ್ತು ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ ಮಾಡಲಾಗಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ.

ಮೈತ್ರಿ ಸರ್ಕಾರದಲ್ಲಿ ಜೆಡಿಎಸ್ ಪಕ್ಷದ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಹಾಗೂ ರಾಜಕೀಯ ಕಾರ್ಯದರ್ಶಿಗಳ ನೇಮಕ ಬಾಕಿ ಉಳಿದಿದ್ದು, ಈ ಬಗ್ಗೆ ಸಭೆಯಲ್ಲಿ ಸಮಗ್ರ ಚರ್ಚೆ ನಡೆದು ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.

ಈಗಾಗಲೇ ವರಿಷ್ಠರು ಪ್ರಕಟಿಸಿರುವಂತೆ ಒಂದೇ ಹಂತದಲ್ಲಿ ನಿಗಮ ಮಂಡಳಿಗಳಿಗೆ ನೇಮಕ ಮಾಡುವ ಬಗ್ಗೆಯೂ ನಿರ್ಣಯ ಕೈಗೊಳ್ಳುವ ಸಂಭವವಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಅಭ್ಯರ್ಥಿಗಳಿಗೆ ಹಾಗೂ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೇಮಕದಲ್ಲಿ ಆದ್ಯತೆ ನೀಡುವ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಈ ಎಲ್ಲಾ ವಿಚಾರಗಳ ಬಗ್ಗೆ ನಾಳಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Leave A Reply

Your email address will not be published.